This is the title of the web page
This is the title of the web page

ಮಲ್ಲಿಕಾರ್ಜುನ್‌ ಖರ್ಗೆ, ಹಾಗೂ ಅವರ ಕುಟುಂಬದ ಹತ್ಯೆಗೆ ಸಂಚು : ಬಿಜೆಪಿ ಅಭ್ಯರ್ಥಿ ಆಡಿಯೋ ವೈರಲ್: ಸುರ್ಜೆವಾಲ್ ಆಕ್ರೋಶ

ಮಲ್ಲಿಕಾರ್ಜುನ್‌ ಖರ್ಗೆ, ಹಾಗೂ ಅವರ ಕುಟುಂಬದ ಹತ್ಯೆಗೆ ಸಂಚು : ಬಿಜೆಪಿ ಅಭ್ಯರ್ಥಿ ಆಡಿಯೋ ವೈರಲ್: ಸುರ್ಜೆವಾಲ್ ಆಕ್ರೋಶ

 

ಬೆಂಗಳೂರು, ಮೇ 6:  ಬಿಜೆಪಿ ಕನ್ನಡ ನಾಡಿನ ಮಗ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ದ್ವೇಷ ಕಾರುತ್ತಲೆ ಬಂದಿದೆ. ಖರ್ಗೆ ಅವರು ದಲಿತ ಹಾಗೂ ಕಾರ್ಮಿಕ ಕುಟುಂಬದಲ್ಲಿ ಜನಿಸಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸ್ಥಾನದಿಂದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದವರೆಗೆ ಬೆಳೆದು ಬಂದಿರುವುದನ್ನು ಅರಗಿಸಿಕೊಳ್ಳಲಾಗದ ಬಿಜೆಪಿ ಖರ್ಗೆ ಅವರ ವಿರುದ್ಧ ಸಂಚು ರೂಪಿಸುತ್ತಿದೆ.

ಬಿಜೆಪಿ ತನ್ನ ದ್ವೇಷದ ಮೂಲಕ ಕರ್ನಾಟಕದ ಮಣ್ಣಿನ ಮಗ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬವನ್ನು ಕೊಲ್ಲುವ ಸಂಚು ರೂಪಿಸಿ ಪಾಪದ ಕೃತ್ಯ ಎಸಗಿದೆ. ಹತ್ಯೆಗೆ ಸಂಚು ನಡೆದಿದ್ದರೂ ಮೋದಿ ಹಾಗೂ ಬಿಜೆಪಿ ನಾಯಕರು ಮೌನಕ್ಕೆ ಶರಣಾಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ಕಿಡಿಕಾರಿದ್ದಾರೆ.

ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ತೋರುತ್ತಿರುವುದರಿಂದ ಕಂಗೆಟ್ಟಿರುವ ಬಿಜೆಪಿ ಮಲ್ಲಿಕಾರ್ಜುನ ಖರ್ಗೆ, ಅವರ ಪತ್ನಿ ಸೇರಿದಂತೆ ಇಡೀ ಕುಟುಂಬವನ್ನೇ ಹತ್ಯೆ ಮಾಡುವ ಸಂಚು ರೂಪಿಸಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬೊಮ್ಮಾಯಿ ಅವರ ಆತ್ಮೀಯ ನೀಲಿ ಕಂಗಳ ಹುಡುಗ ಹಾಗೂ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಅವರ ಆಡಿಯೋದಲ್ಲಿ ಈ ಸಂಚು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಮೇ 02, 2023ರಂದು ಬಿಜೆಪಿ ರಾಜಸ್ಥಾನದ ಶಾಸಕ ಹಾಗೂ ಪ್ರಧಾನ ಕಾರ್ಯದರ್ಶಿ ಮದನ್ ದಿಲಾವರ್ ಖರ್ಗೆ ಅವರಿಗೆ 80 ವರ್ಷ ವಯಸ್ಸಾಗಿದ್ದು, ದೇವರು ಅವರನ್ನು ಯಾವಾಗ ಬೇಕಾದರೂ ಕರೆಸಿಕೊಳ್ಳಬಹುದು ಎಂದು ಮಲ್ಲಿಕಾರ್ಜುನ್‌ ಖರ್ಗೆ ಅವರ ಸಾವನ್ನು ಬಯಸಿದ್ದರು. ಈಗ ಬಿಜೆಪಿ ನಾಯಕರು ಬಹಿರಂಗವಾಗಿ ಮಲ್ಲಿಕಾರ್ಜುನ್‌ ಖರ್ಗೆ ಹಾಗೂ ಅವರ ಕುಟುಂಬದ ಹತ್ಯೆಗೆ ಸಂಚು ರೂಪಿಸಿದ್ದಾರೆ.

ಚುನಾವಣೆ ಸೋಲುವ ಹತಾಷೆಯಲ್ಲಿ ಬಿಜೆಪಿ ಹಾಗೂ ಅದರ ನಾಯಕರು ಅತ್ಯಂತ ಭಯಾನಕ ಹಂತಕ್ಕೆ ತಲುಪಿದ್ದಾರೆ. ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ರೂಪಿಸಿರುವ ಯೋಜನೆ, ಕಾರ್ಯಕ್ರಮಗಳ ಬಗ್ಗೆ ಚರ್ಚೆ ಮಾಡದೆ, ತಮ್ಮ 40% ಕಮಿಷನ್ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಪ್ರತಿನಿತ್ಯ ಭಾವನಾತ್ಮಕ ವಿಚಾರದ ಬಗ್ಗೆ ಮಾತನಾಡಿ ಸಮಾಜ ಒಡೆಯುವ ಪ್ರಯತ್ನಕ್ಕೆ ಮುಂದಾಗಿದೆ. ಈ ಕುತಂತ್ರದಲ್ಲೂ ಯಶಸ್ಸು ಕಾಣದೆ ಕುಸಿಯುತ್ತಿರುವ ಬಿಜೆಪಿ ಈಗ ತಮ್ಮ ಬತ್ತಳಿಕೆಯಿಂದ ಹತ್ಯೆ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.