ಬೆಂಗಳೂರು: ಕರ್ನಾಟಕದ ಹಿತಕ್ಕಾಗಿ ನಮ್ಮ ಧ್ವನಿಗೆ ಧ್ವನಿಗೂಡಿಸುತ್ತೀರ ಎಂದು ನಂಬಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಬುಧವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದ್ದು, ಈ ಧರಣಿಯಲ್ಲಿ ಭಾಗವಹಿಸುವಂತೆ ರಾಜ್ಯದ ಕೇಂದ್ರ ಸಚಿವರು, ಸಂಸದರು ಮತ್ತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಪತ್ರ ಬರೆದಿದ್ದಾರೆ.ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಇದು ಬಿಜೆಪಿ ವಿರುದ್ಧ ಕಾಂಗ್ರೆಸ್ ನಡೆಸುವ ಪ್ರತಿಭಟನೆ ಅಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ನಡೆಯುವ ಪ್ರತಿಭಟನೆ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಬಿಜೆಪಿ ಸಂಸದರು ಮತ್ತು ಶಾಸಕರುಗಳಿಗೂ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಕೇಂದ್ರದ ವಿತ್ತ ಸಚಿವರಾಗಿರುವ ನಿರ್ಮಲಾ ಸೀತಾರಾಮನ್,
ರಾಜ್ಯಸಭೆಯ ವಿವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಎಚ್ ಡಿ ದೇವೇಗೌಡ, ಕರ್ನಾಟಕದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಪ್ರಹ್ಲಾದ್ ಜೋಶಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಡಿವಿ ಸದಾನಂದಗೌಡ ಸೇರಿದಂತೆ ದೆಹಲಿಯಲ್ಲಿ ನಾಡನ್ನು ಪ್ರತಿನಿಧಿಸುತ್ತಿರುವ ಎಲ್ಲಾ ಗೌರವಾನ್ವಿತರಿಗೆ ನಾಳೆ ನಡೆಯಲಿರುವ ದಿಲ್ಲಿ ಚಲೋದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.
ಯಾವುದೇ ಪಕ್ಷದ ವಿರುದ್ಧದ ಹೋರಾಟವಲ್ಲ, ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದಿಂದ ನಾಡಿಗೆ ಆಗುತ್ತಿರುವ ಅನ್ಯಾಯ, ತೆರಿಗೆ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿನ ತಾರತಮ್ಯದ ವಿರುದ್ಧದ ಹೋರಾಟ. ಕರ್ನಾಟಕದ ಭವಿಷ್ಯಕ್ಕಾಗಿ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ನಾಳೆ ಬೆಳಿಗ್ಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ. ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ದೆಹಲಿ ಸರ್ಕಾರಕ್ಕೆ ತಲುಪಿಸಿ, ನ್ಯಾಯ ಕೇಳುವುದು ನಮ್ಮೆಲ್ಲರ ಕರ್ತವ್ಯ.