ಬೆಳಗಾವಿ : ಉತ್ತರ ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಮೇ 7 ರಂದು ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧ ಪ್ರಬಲ ಶಕ್ತಿಯಾಗಿ ಲಿಂಗಾಯತ ಮತ್ತು ಅಹಿಂದ ಸಮುದಾಯಗಳನ್ನು ಬಳಸಿಕೊಳ್ಳಲು ಕಾಂಗ್ರೆಸ್ ಯೋಜನೆ ರೂಪಿಸಿದ್ದು. ಈ ಭಾಗದಲ್ಲಿ ಜೆಡಿಎಸ್ ಅಷ್ಟೇನು ಪ್ರಭಾವ ಹೊಂದಿಲ್ಲದ ಕಾರಣ ಬಿಜೆಪಿ ಏಕಾಂಗಿಯಾಗಿ ಹೋರಾಡಬೇಕಾದ ಅನಿವಾರ್ಯತೆ ಉಂಟಾಗಿದ್ದು,
ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ಕೂಡ ಪಕ್ಷಕ್ಕೆ ನಿರ್ಣಾಯಕವಾಗಿದೆ. ವಿಜಯಪುರ, ಕಲಬುರಗಿ, ಬೀದರ್ನ ಕೆಲವು ಕ್ಷೇತ್ರಗಳಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಪ್ರಬಲ ಪೈಪೋಟಿ ನೀಡಿದ್ದರು. ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ದು, ಈ ಪ್ರದೇಶದ 14 ಲೋಕಸಭಾ ಸ್ಥಾನಗಳಿಗೆ ಕಾರ್ಯತಂತ್ರ ರೂಪಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ಥಳೀಯ ಮುಖಂಡರಿಗೆ ಸೂಚನೆ ನೀಡಿದ್ದು, ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಸೂಚಿಸಿದ್ದಾರೆ. ಏಪ್ರಿಲ್ 26 ರಂದು ದಕ್ಷಿಣ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಗಿದ ನಂತರ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಉಳಿದ 14 ಸ್ಥಾನಗಳ ಮೇಲೆ ಗಮನ ಕೇಂದ್ರೀಕರಿಸಲು ಹತ್ತು ದಿನಗಳ ಕಾಲಾವಕಾಶ ನೀಡಲಿದ್ದಾರೆ. ಮಧ್ಯ ಮತ್ತು ಉತ್ತರ ಕರ್ನಾಟಕದಲ್ಲಿ ಸಿದ್ದರಾಮಯ್ಯನವರ ಕುರುಬ ಜನಾಂಗದ ಮತದಾರರ ಸಂಖ್ಯೆ ಗಣನೀಯವಾಗಿದೆ.