ಹುಬ್ಬಳ್ಳಿ: ಕಾಂಗ್ರೆಸ್ ಪ್ರತಿಭಟನಾಕಾರರನ್ನು ಜೆಡಿಎಸ್ ಕಾರ್ಯಕರ್ತರು ತಡೆದಿದ್ದಾರೆ. ಈ ವೇಳೆ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ತೀವ್ರ ಮಾತಿನ ಚಕಮಕಿ, ವಾಗ್ವಾದ ನಡೆದಿದ್ದು, ಪರಿಸ್ಥಿತಿ ಕೈ ಕೈ ಮಿಲಾಯಿಸುವ ತಲುಪಿತು. ನಂತರ ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಂಗಳವಾರ ಭಾರಿ ಜಟಾಪಟಿ ನಡೆದಿದೆ. ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ವಾಗ್ವಾದ ನಡೆದಿದ್ದು, ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಗಿದೆ.
ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ. ಕುಮಾರಸ್ವಾಮಿ ತಂಗಿದ್ದ ಹೋಟೆಲ್ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಹೋಟೆಲ್ ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ನಂತರ ಮಾತನಾಡಿದ ಮಾಜಿ ಸಚಿವ ಸಾರಾ ಮಹೇಶ್, ಕೋರ್ ಕಮಿಟಿ ಸಭೆಗೆ ಹೋಗುವಾಗ ಕಾಂಗ್ರೆಸ್ ಪ್ರತಿಭಟನಾಕಾರರು ನಮ್ಮನ್ನು ತಡೆದಿದ್ದಾರೆ. ಪ್ರತಿಭಟನೆ ವೇಳೆ ಚಪ್ಪಲಿ ಎಸೆದಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸಿಗರಿಗೆ ಪ್ರತಿಭಟನೆ ನಡೆಸಲು ಅನುಮತಿ ನೀಡಿದವರು ಯಾರು, ಸಭೆ ವೇಳೆ ಏಕಾಏಕಿ ಬಂದು ಗಲಾಟೆ ಮಾಡಿದ್ದು ಸರಿನಾ ಎಂದು ಪ್ರಶ್ನಿಸಿದ ಅವರು, ಸೂಕ್ತ ರೀತಿಯಲ್ಲಿ ತನಿಖೆ ಮಾಡಿ ಕ್ರಮ ಕೈಗೊಳ್ಳಲು ಕಮೀಷನರ್ ಅವರನ್ನು ಒತ್ತಾಯಿಸುವುದಾಗಿ ತಿಳಿಸಿದರು.