ಬೆಂಗಳೂರು:ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಯಾವಾಗ ಎಂಬುದು ಬಿಜೆಪಿ ಅಭ್ಯರ್ಥಿಗಳಲ್ಲಿ ಆತಂಕ ಶುರುವಾಗಿದೆ. ಅಮಿತ್ ಶಾ ಮತ್ತು ಪ್ರಧಾನಿ ಮೋದಿಯವರೊಂದಿಗೆ ಮತ್ತೊಮ್ಮೆ ಸಭೆ ನಡೆಸಿ ನಂತರ ಪಟ್ಟಿಯನ್ನು ಪ್ರಕಟಿಸುತ್ತೇವೆ ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ.ದೆಹಲಿಯಲ್ಲಿ ಸತತ ಮೂರು ದಿನಗಳ ಕಾಲ ಮ್ಯಾರಥಾನ್ ಸಭೆಗಳನ್ನು ನಡೆಸಿದ್ದರೂ ವಿಧಾನಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಇನ್ನೂ ಬಿಡುಗಡೆ ಮಾಡಿಲ್ಲ.
ಹಲವು ಸಮೀಕ್ಷಾ ವರದಿಗಳು ಬಿಜೆಪಿಗೆ ಸಂಪೂರ್ಣ ಬಹುಮತ ನೀಡಿಲ್ಲ. ಹೀಗಾಗಿ, ಪಕ್ಷವು ಅಧಿಕಾರಕ್ಕೆ ಮತ್ತೆ ಮರಳಲು ಬೇಕಾದ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ, ಸೋಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಅಪಾಯವನ್ನು ತೆಗೆದುಕೊಳ್ಳಲು ಸಿದ್ಧರಿಲ್ಲ ಎಂದು ತಿಳಿದು ಬಂದಿದೆ.
ಯಡಿಯೂರಪ್ಪ ಅವರು ಪಟ್ಟಿಯನ್ನು ಅಂತಿಮಗೊಳಿಸದೆ ಹಿಂತಿರುಗಿದ್ದಾರೆ. ಪಕ್ಷದಲ್ಲಿ ಗೊಂದಲವಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ಹೈಕಮಾಂಡ್ ಕೆಲವು ಅಭ್ಯರ್ಥಿಗಳ ಫೇವರ್ ಆಗಿಲ್ಲ ಜೊತೆಗೆ ಹೊಸ ಮುಖಗಳನ್ನು ಕಣಕ್ಕಿಳಿಸಲು ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಸೋಮವಾರ ಬಿಡುಗಡೆ ಮಾಡುವ ನಿರೀಕ್ಷೆಯಿತ್ತು, ಆದರೂ ರಿಲೀಸ್ ಆಗಲಿಲ್ಲ. ಮಂಗಳವಾರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಹೇಳಿದರೆ, ಬುಧವಾರದಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪಟ್ಟಿ ಅಂತಿಮ ಹಂತದಲ್ಲಿದೆ. ನಾವು ಮ್ಯಾರಥಾನ್ ಸಭೆಗಳನ್ನು ನಡೆಸಿದ್ದೇವೆ ಮತ್ತು ಪ್ರತಿ ವಿಧಾನಸಭಾ ಕ್ಷೇತ್ರದ ಬಗ್ಗೆ ಚರ್ಚಿಸಿದ್ದೇವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿಯಲ್ಲಿಲ್ಲ, ಅವರು ಮಂಗಳವಾರ ಸಂಜೆ ಮರಳುವ ನಿರೀಕ್ಷೆಯಿದೆ. ಅಮಿತ್ ಶಾ ಮತ್ತು ಪ್ರಧಾನಿ ಮೋದಿಯವರೊಂದಿಗೆ ಮತ್ತೊಮ್ಮೆ ಸಭೆ ನಡೆಸಿ ನಂತರ ಪಟ್ಟಿಯನ್ನು ಪ್ರಕಟಿಸುತ್ತೇವೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಬೇರೆ ಪಕ್ಷಗಳು ಈಗಾಗಲೇ ತಮ್ಮಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಪ್ರಚಾರ ಆರಂಭಿಸಿದ್ದಾರೆ, ಆದರೆ ಆಡಳಿತಾರೂಢ ಬಿಜೆಪಿ ಇನ್ನೂ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿಲ್ಲ, ಹೆಸರು ಅಂತಿಮಗೊಂಡಿರುವ ಕೆಲವು ಆಕಾಂಕ್ಷಿಗಳು ನಾಮಪತ್ರ ಸಲ್ಲಿಸಲು ತಮ್ಮ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಸಿಎಂ ಅವರಿಂದ ಕರೆ ಬಂದಿದೆ ಎಂದು ಮೂಲಗಳು ತಿಳಿಸಿವೆ. ಪಟ್ಟಿ ಬಿಡುಗಡೆಯಲ್ಲಿಆಗುತ್ತಿರುವ ವಿಳಂಬವು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಅಡ್ಡಿಯಾಗಬಾರದು ಎಂದು ಮೂಲಗಳು ತಿಳಿಸಿವೆ.
ಸೋಮವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮಂಗಳವಾರ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದರು.