ಬಳ್ಳಾರಿ ಏ 28 : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಳ್ಳಾರಿಯಲ್ಲಿ ಶುಕ್ರವಾರ ಭರ್ಜರಿ ರೋಡ್ ಶೋ ನಡೆಸಿ, ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಿದರು.
ಬಳ್ಳಾರಿಯ ಟಿ ಬಿ ಸ್ಯಾನಿಟೋರಿಯಂ ಗೇಟ್ ನಿಂದ ತೆರದ ವಾಹನದಲ್ಲಿ ಕೌಲ್ ಬಜಾರ್ ಮಾರ್ಗವಾಗಿ ಮೋತಿ ಸರ್ಕಲ್ ವರೆಗೆ ರೋಡ್ ಶೋ ನಡೆಸಿದರು. ಬಳ್ಳಾರಿ ಗ್ರಾಮೀಣ ಅಭ್ಯರ್ಥಿ ಬಿ. ನಾಗೇಂದ್ರ ಮತ್ತು ಬಳ್ಳಾರಿ ನಗರ ಕ್ಷೇತ್ರದ ಅಭ್ಯರ್ಥಿ ನಾರಾ ಭರತ್ ರೆಡ್ಡಿ ರಾಹುಲ್ ಗಾಂಧಿಗೆ ಜೊತೆಯಲ್ಲಿದ್ದರು.
ನಂತರ ಬಹಿರಂಗ ವೇದಿಕೆ ಕಾರ್ಯಕ್ರಮದಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಬಳ್ಳಾರಿಯಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪಿಸುವ ಮೂಲಕ ‘ಜೀನ್ಸ್ ರಾಜಧಾನಿ’ ಮಾಡುತ್ತೇವೆ. ಇದು ನನ್ನ ವೈಯಕ್ತಿಕ ಭರವಸೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಹೋದಲ್ಲೆಲ್ಲಾ ಸುಳ್ಳು ಭರವಸೆಗಳನ್ನು ನೀಡುತ್ತಾರೆ, ಆದರೆ ನಾವು ಎಂದಿಗೂ ಸುಳ್ಳು ಭರವಸೆ ನೀಡುವುದಿಲ್ಲ. ಇನ್ನು 5 ವರ್ಷಗಳಲ್ಲಿ ಬಳ್ಳಾರಿ ‘ಜೀನ್ಸ್ ಕ್ಯಾಪಿಟಲ್’ ಆಗಲಿದೆ. ಇದಕ್ಕೆ ಎಷ್ಟು ಅನುದಾನ ಬೇಕೋ ಅದನ್ನು ಬಳ್ಳಾರಿಗೆ ಒದಗಿಸಿ ಎಂದು ಪಕ್ಷದ ಹಿರಿಯ ನಾಯಕರಿಗೆ ಹೇಳುತ್ತೇನೆ ಎಂದರು.
ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಕೋಟಿ ರೂಪಾಯಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 5,000 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಭರವಸೆ ನೀಡಿದ್ದಾರೆ.
ಮಳೆಯ ನಡುವೆಯೂ ಕಲಬುರಗಿ ಜಿಲ್ಲೆಯ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಕಾಂಗ್ರೆಸ್ ಮುಖ್ಯಸ್ಥರು, 50,000 ಸರ್ಕಾರಿ ಉದ್ಯೋಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿದರು. ಈ ಪ್ರದೇಶಕ್ಕೆ 5,000 ಕೋಟಿ ರೂ., ಪ್ರತಿ ಗ್ರಾಮ ಪಂಚಾಯತಿಗೆ ಒಂದು ಕೋಟಿ ರೂಪಾಯಿ ನಿಗದಿ ಮಾಡಲಾಗುವುದು ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶವು ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳನ್ನು ಒಳಗೊಂಡಿದೆ.
ಕರ್ನಾಟಕದಲ್ಲಿ ಬಿಜೆಪಿ ಸಚಿವರು ಸಾರ್ವಜನಿಕ ಕಾಮಗಾರಿಗಳಿಗೆ ಗುತ್ತಿಗೆದಾರರಿಂದ ಶೇ 40ರಷ್ಟು ಕಮಿಷನ್ ಸಂಗ್ರಹಿಸಿದ್ದು, ಪಕ್ಷಕ್ಕೆ 40ಕ್ಕಿಂತ ಹೆಚ್ಚು ಸ್ಥಾನಗಳು ಬರುವುದಿಲ್ಲ. ಕಾಂಗ್ರೆಸ್ 150 ಸ್ಥಾನಗಳನ್ನು ಗೆದ್ದು ಮುಂದಿನ ಸರ್ಕಾರ ರಚಿಸಲಿದೆ ಎಂದು ರಾಹುಲ್ ಗಾಂಧಿ ಹೇಳಿದರು.
ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವನ್ನು ‘ಕಳ್ಳತನದ ಸರ್ಕಾರ’ ಎಂದು ಕರೆದ ಅವರು, ಆಡಳಿತ ಪಕ್ಷವು ವಿರೋಧ ಪಕ್ಷದ ಶಾಸಕರನ್ನು ಖರೀದಿಸಿದೆ. ನಾವು ಸರ್ಕಾರ ರಚನೆ ಮಾಡಲಿದ್ದೇವೆ. ನಮ್ಮ ಪಕ್ಷ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.
ಅವರು ಕಾಂಗ್ರೆಸ್‌ನ ನಾಲ್ಕು ಪ್ರಮುಖ ‘ಖಾತರಿ’ಗಳನ್ನು ಪುನರುಚ್ಚರಿಸಿದರು. ಕುಟುಂಬದ ಮುಖ್ಯಸ್ಥ ಮಹಿಳೆಗೆ 2,000 ರೂ, ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್, ಎರಡು ವರ್ಷಗಳವರೆಗೆ ನಿರುದ್ಯೋಗಿ ಪದವೀಧರರಿಗೆ 3,000 ರೂ. ಮತ್ತು ನಿರುದ್ಯೋಗಿ ಡಿಪ್ಲೋಮಾ ಹೊಂದಿರುವವರಿಗೆ 1,500 ರೂ. (ಇಬ್ಬರೂ 18 ವರ್ಷದಿಂದ 25 ವರ್ಷ ವಯಸ್ಸಿನವರಿಗೆ) ಮತ್ತು ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ತಿಂಗಳಿಗೆ 10 ಕೆಜಿ ಅಕ್ಕಿ ವಿತರಿಸಲಾಗುವುದು ಎಂದು ಹೇಳಿದರು.