ಬೆಂಗಳೂರು: ‘ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸುವ ಬಿಜೆಪಿಯ ಆಂತರಿಕ ಕುತಂತ್ರದ ಭಾಗವಾಗಿ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ‘ಮೀಸಲಾತಿ ವಿಚಾರದಲ್ಲಿ ಗೊಂದಲ ಮೂಡಿಸಿರುವವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಜನ ತಮಗೆ ಅನ್ಯಾಯ ಆದಾಗ ಅಧಿಕಾರದಲ್ಲಿರುವವರ ಮೇಲೆ ಆಕ್ರೋಶ ವ್ಯಕ್ತಪಡಿಸುವುದು ಸಹಜ. ಆದರೆ, ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳು, ಸಚಿವರ ಮನೆ ಮೇಲೆ ದಾಳಿ ಆಗದೆ ಯಾವುದೇ ಅಧಿಕಾರ ಇಲ್ಲದ ಯಡಿಯೂರಪ್ಪ ಅವರ ಮನೆ ಮೇಲೆ ದಾಳಿ ಆಗಿದೆ ಎಂದರೆ ಇದು ಬಿಜೆಪಿಯ ಕುತಂತ್ರಕ್ಕೆ ಸಾಕ್ಷಿಯಲ್ಲದೆ ಮತ್ತೇನೂ’ ಎಂದು ಶಿವಕುಮಾರ್ ಪ್ರಶ್ನಿಸಿದರು.
ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ದಾಳಿ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ‘ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿತ್ತು. ಈಗ ಗೃಹ ಸಚಿವ ಅಮಿತ್ ಶಾ ಅವರು ಯಡಿಯೂರಪ್ಪ ಅವರ ಮನೆಗೆ ಹೋಗಿ ಅವರ ಜತೆ ಉತ್ತಮ ಸಂಬಂಧ ಹೊಂದಿರುವಂತೆ ತೋರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿದೆ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಆಂತರಿಕವಾಗಿ ಯಡಿಯೂರಪ್ಪ ಅವರನ್ನು ನಿಯಂತ್ರಿಸಲು ಸಾಕಷ್ಟು ಒತ್ತಡ ಹೇರಲಾಗುತ್ತಿದೆ. ನಾನು ಈಗ ಆ ವಿಚಾರದ ಬಗ್ಗೆ ಚರ್ಚೆ ಮಾಡುವುದಿಲ್ಲ’ ಎಂದು ವ್ಯಾಖ್ಯಾನಿಸಿದರು