ಬೆಂಗಳೂರು,: ಡಬಲ್ ಇಂಜಿನ್ ಸರ್ಕಾರ ರಾಜ್ಯದ ಜನರಿಗೆ ‘ಡಬಲ್-ಧೋಕಾ’ ನೀಡಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಆರೋಪಿಸಿದರು.
ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸುರ್ಜೇವಾಲಾ, ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಕರ್ನಾಟಕದ ಜನತೆಗೆ ಅನ್ಯಾಯ ಮಾಡಿದೆ. ಲಿಂಗಾಯತರು ಮತ್ತು ಒಕ್ಕಲಿಗರಿಗೆ ನೀಡಲಾಗಿದ್ದ ಮೀಸಲಾತಿಯನ್ನು ಹಿಂಪಡೆದಿರುವುದಾಗಿ ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ ಎಂದು ತಿಳಿಸಿದರು.
ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಕರ್ನಾಟಕದ ಜನತೆಗೆ ಮೋಸ ಮಾಡಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉತ್ತರಿಸಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೀಸಲಾತಿ ಮಿತಿಯನ್ನು ಹೆಚ್ಚಿಸುವ ಬಗ್ಗೆ ಒತ್ತಾಯ ಮಾಡಿದ್ದರು. ಅದನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಅವರು ( ಬಿಜೆಪಿ ನಾಯಕರು ) ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಸುರ್ಜೇವಾಲಾ ಹೇಳಿದರು.