ದೆಹಲಿ, ಜೂ. 15: “ಜನರು ಪ್ರಧಾನಿ ನರೇಂದ್ರ ಮೋದಿಯವರ ಅಲ್ಪಸಂಖ್ಯಾತ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ. ಅದು ಯಾವಾಗ ಬೇಕಾದರೂ ಬಹುಮತವಿಲ್ಲದೆ ಬೀಳಬಹುದು. ತಪ್ಪಾಗಿ ಎನ್‌ಡಿಎ ಸರ್ಕಾರ ರಚನೆಯಾಗಿದೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ
ಇತ್ತೀಚೆಗಷ್ಟೆ ರಚನೆಯಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಮುಂದುವರಿದು ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ, “ಅವರು (ಪ್ರಧಾನಿ ನರೇಂದ್ರ ಮೋದಿ) ಸ್ವತಃ ಹಲವಾರು ಬಾರಿ ಹೇಳಿದ್ದರು…’ಖಿಚಡಿ ಸರ್ಕಾರ’… ಬಹುಮತ ಇಲ್ಲದಿದ್ದರೆ ಅದು ಯಾವಾಗ ಬೇಕಾದರೂ ಬೀಳಬಹುದು. ಅವರು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಇದು ಅವರೇ ಹೇಳಿದ ಮಾತುಗಳು. ನಾನು ಅದೇ ವಿಷಯವನ್ನು ಮತ್ತೆ ನಿಮ್ಮ ಮುಂದೆ ಹೇಳುತ್ತಿದ್ದೇನೆ” ಎಂದು ಹೇಳಿದ್ದಾರೆ.
ಇನ್ನು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಜೆಡಿಯು ನಾಯಕ ಕೆಸಿ ತ್ಯಾಗಿ, ಕಾಂಗ್ರೆಸ್ ಮುಖ್ಯಸ್ಥರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲಕ ಅರಾಜಕತೆ ಮತ್ತು ಅವಿಶ್ವಾಸದ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಮಾತುಗಳನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.