ಶಿವಮೊಗ್ಗ, ಮಾ 27 : ಒಳ ಮೀಸಲಾತಿ ವಿರೋಧಿಸಿ ಬಂಜಾರ ಸಮಾಜವು ಇನ್ನು ಮುಂದೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಒಳಮೀಸಲಾತಿ ಜಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಬಂಜಾರ ಸಮುದಾಯದವರು ಮಾಜಿ ಮುಖ್ಯಮಂತ್ರಿ, ಶಿಕಾರಿಪುರದ ಬಿಜೆಪಿ ಶಾಸಕ ಬಿ. ಎಸ್. ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಹರಸಾಹಸ ಪಟ್ಟು ಪರಿಸ್ಥಿತಿಯನ್ನು ಹತೋಟಿಗೆ ತಂದರು. ಮುಂಜಾಗ್ರತಾ ಕ್ರಮವಾಗಿ ಶಿಕಾರಿಪುರ ಪಟ್ಟಣದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬಂಜಾರ ಸಮುದಾಯದವರು ಒಳಮೀಸಲಾತಿ ಜಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದರು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆಸುತ್ತಿದ್ದ ಪ್ರತಿಭಟನೆ ಕೈ ಮೀರಿ ಹೋಗಿದ್ದು, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಿವಾಸದ ಬಳಿ ಉದ್ರಿಕ್ತ ವಾತಾವರಣ ನಿರ್ಮಾಣವಾಯಿತು. ಪ್ರತಿಭಟನೆ ಹಿನ್ನಲೆಯಲ್ಲಿ ಮಾಜಿ ಸಿಎಂ ಮನೆ ಮುಂದೆ ಬ್ಯಾರಿಕೇಡ್ ಹಾಕಿ ಭದ್ರತೆ ವ್ಯವಸ್ಥೆ ಮಾಡಲಾಗಿತ್ತು.
ಕಲ್ಲು ತೂರಾಟದಿಂದಾಗಿ ಬಿ. ಎಸ್. ಯಡಿಯೂರಪ್ಪ ನಿವಾಸದ ಕಿಟಕಿ ಗಾಜುಗಳು ಪುಡಿಯಾಗಿವೆ. ತಾಲೂಕು ಬಿಜೆಪಿ ಕಚೇರಿಯ ಮುಂದೆಯೂ ಪ್ರತಿಭಟನಾನಿರತರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಚೇರಿ ಮೇಲಿದ್ದ ಬಾವುಟ ತೆರವುಗೊಳಿಸಿದರು, ಬಂಜಾರ ಸಮುದಾಯದ ಬಾವುಟವನ್ನು ಹಾರಿಸಿದರು.