ಬೆಂಗಳೂರು: ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ಅವರು ನಮ್ಮ ಹಿರಿಯುರು ಮತ್ತು ದೂರದ ಸಂಬಂಧಿಯೂ ಹೌದು ಹಲವಾರು ಬಾರಿ ನಾವು ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಇದರಲ್ಲಿ ರಾಜಕಾರಣ ಬೆರೆಸುವುದು ಸೂಕ್ತವಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರನ್ನು ದಾವಣಗೆರೆಯಲ್ಲಿ ಭೇಟಿ ಮಾಡಿರುವುದಕ್ಕೆ ನಾನಾ ರೀತಿಯ ಊಹಾಪೋಹಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ ಸ್ಪಷ್ಟೀಕರಣ ನೀಡಿರುವ ಅವರು, ನಾನು ಶಿಗ್ಗಾಯಿಂದ ಬೆಂಗಳೂರಿಗೆ ಬರುವಾಗ ರಾತ್ರಿ ಊಟ ಮಾಡಲು ಹೊಟೆಲ್ ಗೆ ಹೋದಾಗ ಅವರು ತಮ್ಮ ಮೊಮ್ಮಕ್ಕಳ ಬಗ್ಗೆ ಹೊಸ ಸಂಬಂಧದ ಕುರಿತು ಚರ್ಚೆ ಮಾಡಲು ಸೇರಿದ್ದರು. ಆ ಸಂದರ್ಭದಲ್ಲಿ ಅವರ ಜೊತೆಗೆ ಹತ್ತು ನಿಮಿಷ ಉಭಯ ಕುಶಲೊಪರಿ ಮಾತನಾಡಿದ್ದು ಯಾವುದೇ ರಾಜಕೀಯ ವಿಷಯ ಪ್ರಸ್ತಾಪ ಆಗಿಲ್ಲ ಎಂದು ತಿಳಿಸಿದ್ದಾರೆ.
ಸ್ನೇಹ ಸಂಬಂಧಗಳೇ ಬೇರೆ ರಾಜಕೀಯ ಸಂಬಂಧವೇ ಬೇರೆ ನಾನು ನನ್ನ ರಾಜಕೀಯ ನಿಲುವಿನಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವ ಪ್ರಶ್ನೇಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.





























