ನವದೆಹಲಿ: ನೂತನವಾಗಿ ಸಂಸತ್ ಭವನ ಉದ್ಘಾಟನೆಗೊಂಡ ಮುಂದೆ ಅಗ್ರಮಾನ್ಯ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದ ಮೇಲೆ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸಬೇಕೆಂದು ಪಟ್ಟುಹಿಡಿದು ಹಲವು ದಿನಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ.
ನೂತನವಾಗಿ ಉದ್ಘಾಟನೆಗೊಂಡ ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಲು ಯತ್ನಿಸಿದ ಒಲಿಂಪಿಯನ್‌ಗಳು ಮತ್ತು ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್‌ಗಳು ಸೇರಿದಂತೆ ಭಾರತದ ಅಗ್ರಮಾನ್ಯ ಕುಸ್ತಿಪಟುಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ.
ನೂತನ ಸಂಸತ್ ಭವನ ಉದ್ಘಾಟನೆ ವೇಳೆ ಕುಸ್ತಿಪಟುಗಳು ಪ್ರತಿಭಟನೆ ನಡೆಸುವ ಸಾಧ್ಯತೆಗಳಿದ್ದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಇದರಂತೆ ದೆಹಲಿ ಮೆಟ್ರೋದ ಕೇಂದ್ರ ಸಚಿವಾಲಯ ಮತ್ತು ಉದ್ಯೋಗ್ ಭವನ ನಿಲ್ದಾಣಗಳಲ್ಲಿನ ಎಲ್ಲಾ ಪ್ರವೇಶ ಮತ್ತು ನಿರ್ಗಮನ ಗೇಟ್‌ಗಳನ್ನು ಅಧಿಕಾರಿಗಳು ಬಂದ್ ಮಾಡಿದ್ದರು.
ಪ್ರತಿಭಟನೆಗೆ ನಿರಾಕರಿಸಿದರೂ ಹಿಂಜರಿದ ಕುಸ್ತಿಪಟುಗಳು ಪ್ರತಿಭಟನೆ ಆರಂಭಿಸಿದ್ದರು. ಈ ಹಿನ್ನೆಲೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರು ಕುಸ್ತಿಪಟುಗಳು ಸೇರಿದಂತೆ ಹಲವನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.